ಬಿಜೆಪಿಯಿಂದ ರಾಜ್ಯಸಭೆಗೆ ಗಸ್ತಿ, ಕಡಾಡಿ!

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿ ಅವರ ಹೆಸರುಗಳನ್ನು ಪ್ರಕಟಿಸಿದೆ. ಈರಣ್ಣ ಕಡಾಡಿ ಮೊದಲಿನಿಂದಲೂ ಆರ್ಎಸ್ಎಸ್, ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಗ್ರಾಮದಲ್ಲಿ ಈರಣ್ಣ ಕಡಾಡಿ ಅವರು 1966ರ ಜೂನ್ 1ರಂದು ಜನಿಸಿದ್ದಾರೆ. ಇವರು 1989ರಿಂದಲೂ ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಅರಭಾಂವಿ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ್ದರು. ಜೊತೆಗೆ ಗೋಕಾಕ್ ತಾಲೂಕು ಬಿಜೆಪಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. 1994 ರಲ್ಲಿ ಅರಭಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಭಾಗದ ಬಿಜೆಪಿ ವಿಭಾಗೀಯ ಪ್ರಭಾರಿಯಾಗಿದ್ದಾರೆ.
ರಾಯಚೂರು ಮೂಲದ ಅಶೋಕ ಗಸ್ತಿಯವರು ಎಬಿವಿಪಿ, ಆರ್ ಎಸ್ ಎಸ್ ನಂತರ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದರು. ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿಯಾಗಿಯೂ ಗಸ್ತಿ ಅವರು ಕಾರ್ಯ ನಿರ್ವಹಿಸಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿರುವ ಗಸ್ತಿ ಅವರು ಬಿಜೆಪಿಗಾಗಿ ಹಗಲಿರುಳು ಶ್ರಮಿಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಸದ್ಯ ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿಯಾಗಿದ್ದಾರೆ.