`ರಾಮಮಂದಿರ ಶಿಲಾನ್ಯಾಸದಲ್ಲಿ ಮೋದಿ ಪಾಲ್ಗೊಂಡರೆ ಸಂವಿಧಾನ ಉಲ್ಲಂಘನೆ’

ನವದೆಹಲಿ: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಭಾಗಿಯಾಗುವುದು ಸಾಂವಿಧಾನಿಕ ಉಲ್ಲಂಘನೆಯಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.
ಬಾಬ್ರಿ ಮಸೀದಿಯೂ ಅಯೋಧ್ಯೆಯಲ್ಲಿ ಇದ್ದದ್ದನ್ನು ನಾವು ಮರೆಯಲು ಸಾಧ್ಯವಿಲ್ಲ. ಆದರೆ ಅದನ್ನು ದುಷ್ಕರ್ಮಿಗಳು 1992 ರಲ್ಲಿ ಕೆಡವಿದರು ಎಂದು ಒವೈಸಿ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. ಆಗಸ್ಟ್ 5 ರಂದು ರಾಮ ಮಂದಿರ ನಿರ್ಮಾಣಕ್ಕಾಗಿ ಶಿಲಾನ್ಯಾಸ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಅವರು ತಿಳಿಸಿದ್ದಾರೆ. ಆದರೆ ಪ್ರಧಾನಿ ಮೋದಿ ಹಾಜರಾಗುವ ಬಗ್ಗೆ ಇನ್ನು ಅಧಿಕೃತ ನಿರ್ಧಾರವಾಗಿಲ್ಲ.