ಬೆಂಗಳೂರು ಗಲಭೆ: ಗಲಭೆಕೋರರಿಂದಲೇ ಹಾನಿ ವಸೂಲಿಗೆ ಕ್ರಮ

ಬೆಂಗಳೂರು: ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡುವ ಬಗ್ಗೆ ಹೈಕೋರ್ಟ್ ಗೆ ಮನವಿ ಸಲ್ಲಿಸಿ ಈಗಾಗಲೇ ನೀಡಲಾಗಿರುವ ಸುಪ್ರಿಂ ಕೋರ್ಟ್ ಆದೇಶದಂತೆ ಕ್ಲೇಮ್ ಕಮಿಷನರ್ ನೇಮಿಸಲು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪ್ರಕರಣದ ತನಿಖೆಗಳನ್ನು ತ್ವರಿತವಾಗಿ ಕೈಗೊಳ್ಳಲು ವಿಶೇಷ ತನಿಖಾ ತಂಡ ರಚಿಸಲಾಗಿರುತ್ತದೆ. ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗುವುದು. ಅಪರಾಧ ಪ್ರಕರಣಗಳಲ್ಲಿ ಬಂಧಿತ ಅಪರಾಧಿಗಳಿಗೆ ಸಂಬಂಧಪಟ್ಟಂತೆ ಅವಶ್ಯ ಕಂಡವರನ್ನು ಗುಂಡಾ ಕಾಯಿದೆಯಡಿಯಲ್ಲಿ ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಡಿ.ಜಿ. ಐಜಿಪಿ ಪ್ರವೀಣ್ ಸೂದ್, ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಜರಿದ್ದರು.

Leave a Reply

Your email address will not be published. Required fields are marked *