ಬೆಂಗಳೂರು ಗಲಭೆ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ -ಯಡಿಯೂರಪ್ಪ

ಬೆಂಗಳೂರು: ಫೇಸ್ಬುಕ್ ನಲ್ಲಿ ಒಂದು ಸಮುದಾಯವನ್ನು ಕೆರಳಿಸುವ ಕೋಮು ಪ್ರಚೋದಕ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ನಡೆದ ಬೆಂಗಳೂರು ಗಲಭೆ ಕುರಿತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. ಜನರು ಯಾವುದೇ ರೀತಿಯಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಅವರು ಮನವಿ ಮಾಡಿದ್ದಾರೆ.
ಟ್ವೀಟ್ ಮಾಡಿರುವ ಯಡಿಯೂರಪ್ಪ, `ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ’ ಎಂದು ಹೇಳಿದ್ದಾರೆ. ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.